Bangalore Kambala ಬೆಂಗಳೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ನವೆಂಬರ್ 25 ರಂದು ಹಾಗೂ 26 ರಂದು ಕಂಬಳ ನಡೆಯುತಿದ್ದು, ಈ ʼಬೆಂಗಳೂರು ಕಂಬಳʼ(ಆಟದ ಕೋಣಗಳ ಸ್ಪರ್ಧೆ)ಕ್ಕೆ ಮೊದಲ ಕೆರೆ ಉದ್ಘಾಟನೆ ನಡೆದಿದೆ. ಇಂದು ಈ ಸಮಾರಂಭದಲ್ಲಿ ಪಾಲುಗೊಂಡ ಅಶ್ವಿನಿ ಪುನೀತ್ ರಾಜ್‌ಕುಮಾರ್ ವಿಶೇಷ ದೀಪ ಬೆಳಗಿಸಿ, ಗಂಗಾರಾತಿ ಮಾಡುವುದರ ಮೂಲಕ ಕರೆಯನ್ನು ಉದ್ಘಾಟನೆ ಮಾಡಲಾಗಿದೆ.
ಕಂಬಳ ಸಮಿತಿ ಅಧ್ಯಕ್ಷ ಶಾಸಕ ಅಶೋಕ್ ರೈ ಹಾಗೂ ಬೆಂಗಳೂರು ಕಂಬಳ ಸಮಿತಿ ಸಂಘಟನಾ ಅಧ್ಯಕ್ಷ ಉಮೇಶ್ ಶೆಟ್ಟಿ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಹಾಜರಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೆಂಗಳೂರು ಕಂಬಳಕ್ಕೆ ಸಂಪೂರ್ಣವಾಗಿ ಸಿದ್ಧಗೊಂಡಿದೆ.
ಕಂಬಳಕ್ಕಾಗಿ ಸಿಲಿಕಾನ್ ಸಿಟಿಗೆ ಸುಮಾರು 200 ಜೋಡಿಯ ಕೋಣಗಳು ಎಂಟ್ರಿ ಕೊಟ್ಟಿದ್ದು, ಬಂದಂತಹ ಕೋಣಗಳು ಇರಲು ಸೂಕ್ತವಾದ ಜಾಗ, ಮೇವು, ಕುಡಿಯುವ ನೀರಿನ ವ್ಯವಸ್ಥೆಯನ್ನ ಸಹ ಮಾಡಲಾಗಿದೆ. ಮಂಗಳೂರಿನಿಂದ ಬಂದು ಬೆಂಗಳೂರಿನ ಕಂಬಳ ಭಾಗವಹಿಸುತ್ತಿರುವ ಬಗ್ಗೆ ಕಂಬಳ ಕ್ರೀಡಾಪಟುಗಳು ಹಾಗೂ ಕೋಣಗಳ ಮಾಲೀಕರು ಸಹ ಸಂತೋಷ ವ್ಯಕ್ತಪಡಿಸಿದ್ದಾರೆ.
ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕರಾವಳಿ ಕ್ರೀಡೆ ಕಂಬಳವನ್ನು ಆಯೋಜನೆ ಮಾಡಲಾಗಿದ್ದು ಕಂಬಳಕ್ಕೆ ಮಳೆ ತಂಪೆರೆದಿದೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ತೆರೆದ ಆವರಣದಲ್ಲಿ ನಿರ್ಮಿಸಲಾಗಿರುವ 155 ಮೀಟರ್ ಗಟ್ಟಿ ಕರೆಯಲ್ಲಿ ಕೋಣಗಳಿಗೆ ಓಡಲು ಅತ್ಯಂತ ಸೂಕ್ತವಾಗಿದೆ ಎಂಬುದನ್ನು ದೃಢಪಡಿಸಿಕೊಳ್ಳಲು ಕೋಣಗಳನ್ನು ಸಾಂಕೇತಿಕವಾಗಿ ಓಡಿಸಲಾಯಿತು. ಕಂಬಳ ಆಯೋಜನೆ ವೇಳೆ ಜಿಟಿ ಜಿಟಿ ಮಳೆಯಾಗಿತ್ತು.
ಉದ್ಘಾಟನಾ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಂಸದ ಸದಾನಂದ ಗೌಡ, ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಎಸ್.ಆರ್.ವಿಶ್ವನಾಥ್ ಹಾಗೂ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ಸಾಕ್ಷಿಯಾದರು. ಇನ್ನು ಕಂಬಳ ಕೆರೆಗೆ ಡಾ. ಪುನಿತ್ ರಾಜ್‌ಕುಮಾರ್ ಪತ್ನಿ ಅಶ್ವಿನಿ ಪುನಿತ್ ರಾಜ್‌ಕುಮಾರ್ ಅವರು ದೀಪ ಬೆಳಗುವ ಮೂಲಕ ಕೋಣಗಳ ಓಟಕ್ಕೆ ಚಾಲನೆ ನೀಡಿದರು.
ಇದನ್ನು ಓದಿ- ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ: ಮುಖ್ಯಮಂತ್ರಿ ಸಿದ್ದರಾಮಯ್ಯ
ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಕಂಬಳ ಪಂದ್ಯಾವಳಿಯನ್ನು ವೀಕ್ಷಿಸಲು ಲಕ್ಷಾಂತರ ಜನರು ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ ಮಾಡಲಾಗಿದೆ. ಅಲ್ಲದೆ ಸಂಚಾರಿ ಪೊಲೀಸರು ಸಾರ್ವಜನಿಕರು ಕಟ್ಟುನಿಟ್ಟಾಗಿ ಟ್ರಾಫಿಕ್ ನಿಯಮ ಪಾಲಿಸುವಂತೆ ನೋಡಿಕೊಳ್ಳುತ್ತಿದ್ದಾರೆ. ಇನ್ನು ಕಂಬಳ ವೀಕ್ಷಣೆಗೆ ಬರುವ ಜನರು ಗೇಟ್ ನಂಬರ್ 1, 2, 3 ಹಾಗೂ 4ರ ಮೂಲಕ ಪ್ರವೇಶಿಸಲು ಅವಕಾಶ ನೀಡಲಾಗಿದೆ.
ಕಂಬಳ ವೀಕ್ಷಿಸಲು ಬರುವ ವಿವಿಐಪಿಗಳಿಗೆ ಪ್ರತ್ಯೇಕ ಎಂಟ್ರಿ ವ್ಯವಸ್ಥೆ ಮಾಡಲಾಗಿದೆ. ವಿವಿಐಪಿಗಳು ಫನ್ ವರ್ಲ್ಡ್ ಕಡೆಯಿಂದ ಪ್ರವೇಶಿಸಬೇಕು. ಯಾವುದೇ ಟಿಕೆಟ್ ಇಲ್ಲದೆ ಉಚಿತವಾಗಿ ಪ್ರವೇಶದ ವ್ಯವಸ್ಥೆ ಮಾಡಲಾಗಿದೆ. ಸಂಜೆ 6:30 ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬಳ ಮೈದಾನಕ್ಕೆ ಆಗಮಿಸಲಿದ್ದಾರೆ.
ಗೆದ್ದ ಕೋಣಗಳಿಗೆ ಬಹುಮಾನ ಇಂತಿದೆ…
ಪ್ರಥಮ ಬಹುಮಾನ 16 ಗ್ರಾಂ ಚಿನ್ನ ಹಾಗೂ 1 ಲಕ್ಷ ನಗದು
ಎರಡನೇ ಬಹುಮಾನ 8 ಗ್ರಾಂ ಚಿನ್ನ ಹಾಗೂ 50,000 ನಗದು
ಮೂರನೇ ಬಹುಮಾನ 4 ಗ್ರಾಂ ಚಿನ್ನ ಹಾಗೂ 25,000 ನಗದು ಸಿಗಲಿದೆ.